Malenadu Mitra
ರಾಜ್ಯ ಶಿವಮೊಗ್ಗ

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ

ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಮೊಗ್ಗ ನಗರದ ಸವಳಂಗ ರಸ್ತೆ ಮತ್ತು ಕಾಶಿಪುರದಲ್ಲಿ ಹಾಗೂ ಭದ್ರಾವತಿಯಲ್ಲಿ ಒಟ್ಟು 4 ರೈಲ್ವೇ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಸವಳಂಗ ರಸ್ತೆಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76ಕೋಟಿ ರೂ. ಬಿಡುಗಡೆ ಮಾಡಿದೆ. ಇಲ್ಲಿ ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಶಿಪುರ ರೈಲ್ವೇ ಕ್ರಾಸಿಂಗ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ಪರ್ಯಾಯ ರಸ್ತೆ: ಮಾರ್ಚ್ ಒಂದರಂದು ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲಾ ರೈಲ್ವೇ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ರೈಲ್ವೇ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ 60ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಟಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದು ಅವರು ಹೇಳಿದರು.

ಕೇಂದ್ರ ರೈಲ್ವೇ ಸಚಿವರ ಆಗಮನ: ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಮಾರ್ಚ್ ಮೊದಲ ವಾರದಲ್ಲಿ ಶಿವಮೊಗ್ಗ ಆಗಮಿಸುವ ಸಾಧ್ಯತೆಯಿದೆ. ಸಚಿವರು ಆ ಸಂದರ್ಭದಲ್ಲಿ ರೈಲ್ವೇ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆಯುಕ್ತ ಚಿದಾನಂದ ವಟಾರೆ, ರೈಲ್ವೇ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆÀ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Ad Widget

Related posts

ವೈಲ್ಡ್ ಟಸ್ಕರ್‍ನಿಂದ ಮಾವುತರಿಗೆ ಫುಡ್‍ಕಿಟ್ ವಿತರಣೆ

Malenadu Mirror Desk

ಸೊರಬದಲ್ಲಿ ದಸರಾ ಉತ್ಸವಕ್ಕೆ ಭವ್ಯ ತೆರೆ

Malenadu Mirror Desk

ಬೆಂಕಿ ಅವಘಡ ಮೂವರು ಸಾವು,ಒಬ್ಬರು ಗಂಭೀರ, ತೀರ್ಥಹಳ್ಳಿ ತಾಲೂಕಲ್ಲಿ ಹೃದಯ ವಿದ್ರಾವಕ ಘಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.