ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆ.೨೮ ರಂದು ಭದ್ರಾವತಿಯಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಬಸವೇಶ್ ಬಂಧನವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಜೆಪಿ ಮುಖಂಡರು ನೀಡಿದ್ದದೂರಿನ ಹಿನ್ನೆಲೆಯಲ್ಲಿ ಶಾಸಕರ ಕುಟುಂಬ ಸದಸ್ಯರ ಮೇಲೆ ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಊರು ಬಿಟ್ಟಿದ್ದ ಬಸವೇಶ್ ಚಿತ್ರದುರ್ಗದಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದಾರೆನ್ನಲಾಗಿದೆ.
ಕಬಡ್ಡಿ ಪಂದ್ಯದ ಫೈನಲ್‌ನಲ್ಲಿ ಪರಾಜಿತ ತಂಡದ ಪ್ರಾಯೋಜಕರಾದ ಬಿಜೆಪಿ ಮುಖಂಡರು ಗಲಾಟೆ ಮಾಡಿದ್ದರಿಂದ ಅವರ ಮೇಲೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿದ್ದರೆಂದು ದೂರು ದಾಖಲಾಗಿತ್ತು. ಈ ಪ್ರಕರಣ ಭದ್ರಾವತಿಯಲ್ಲಿ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿಯ ಧರ್ಮಪ್ರಸಾದ್ ಮತ್ತಿತರರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಪ್ರಕರಣದಲ್ಲಿ ಈವರೆಗೆ ಹದಿನೈದು ಜನರ ವಿರುದ್ಧ ದೂರು ದಾಖಲಿಸಲಾಗಿದೆ.ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ದೌರ್ಜನ್ಯ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಆರೋಪಿಸಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಾ.೯ ರಂದು ಪೊಲೀಸ್ ದೌರ್ಜನ್ಯ ಹಾಗೂ ಸಂಗಮೇಶ್ ಕುಟುಂಬದ ಮೇಲೆ ದೂರು ದಾಖಲಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಶಿವಮೊಗ್ಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
previous post
next post