ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾನ್ಸೂನ್ ಪೂರ್ವಸಿದ್ಧತೆ, ಕೋವಿಡ್ ನಿರ್ವಹಣೆ ಹಾಗೂ ಪ್ರಮುಖ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನೆ ನಡೆಸಿದರು.
ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಕಷ್ಟು ದಾಸ್ತಾನು ಖಾತ್ರಿಪಡಿಸಬೇಕು. ನೆರೆ ಪರಿಸ್ಥಿತಿಯನ್ನು ಎದುರಿಸಲು ಸಹಾಯವಾಣಿ ಆರಂಭ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನೆರೆ ಹಾವಳಿಗೆ ತುತ್ತಾಗಬಹುದಾದ ಪ್ರದೇಶಗಳನ್ನು ಗುರುತಿಸಿ ಸಂಭಾವ್ಯ ಹಾನಿಯನ್ನು ತಪ್ಪಿಸಲು ಮುನ್ನಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಈಗಾಗಲೇ ಮಾನ್ಸೂನ್ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಸ್ಥಳೀಯವಾಗಿ ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಇಂಜಿನಿಯರ್‍ಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ತುರ್ತು ರಕ್ಷಣಾ ಕಾರ್ಯಗಳಿಗಾಗಿ 5ಬೋಟ್‍ಗಳು ಲಭ್ಯವಿದ್ದು, ಖಾಸಗಿ ಸಂಸ್ಥೆಗಳ ಬೋಟ್‍ಗಳನ್ನು ಅಗತ್ಯ ಬಿದ್ದರೆ ಪಡೆಯಲು ಸೂಚಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದು, ಸಾವಿನ ಪ್ರಮಾಣ ಸಹ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಹೋಂ ಐಸೋಲೇಷನ್ ಅವಕಾಶ ನೀಡಲಾಗುತ್ತಿದ್ದು, ಕರೋನಾ ಪಾಸಿಟಿವ್ ವ್ಯಕ್ತಿಗಳ ಸೇವೆಗಾಗಿ ಒಟ್ಟು 17 ಕೋವಿಡ್ ಕೇರ್ ಸೆಂಟರ್‍ಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ 400ಕ್ಕೂ ಅಧಿಕ ಕಂಟೈನ್‍ಮೆಂಟ್ ವಲಯಗಳನ್ನು ರಚಿಸಲಾಗಿದ್ದು, ಈ ವಲಯದಲ್ಲಿ ಕರೋನಾ ಪರೀಕ್ಷೆಯನ್ನು ವ್ಯಾಪಕ ಪ್ರಮಾಣದಲ್ಲಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅನಗತ್ಯ ಸಿಟಿ ಸ್ಕ್ಯಾನ್ ಬೇಡ:
ಕರೋನಾ ಚಿಕಿತ್ಸೆ ಸಂದರ್ಭದಲ್ಲಿ ಅನಗತ್ಯವಾಗಿ ಸಿಟಿ ಸ್ಕ್ಯಾನ್ ಮಾಡುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಖಾಸಗಿ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡುವಂತೆ ಸೆಲ್ವಕುಮಾರ್ ಅವರು ಸೂಚನೆ ನೀಡಿದರು.
ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ರೈಲ್ವೇ ಮೇಲ್ಸೇತುವೆ ಕಾಮಗಾರಿ, ತುಮಕೂರು ಶಿವಮೊಗ್ಗ ಮತ್ತು ಚಿತ್ರದುರ್ಗ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಸ್ಮಾರ್ಟ್ ಸಿಟಿ ಕಾಮಗಾರಿ, ಸಿಗಂದೂರು ಸೇತುವೆ ನಿರ್ಮಾಣ ಸೇರಿದಂತೆ ಎಲ್ಲಾ ಪ್ರಮುಖ ಯೋಜನೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವಂತೆ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.