Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಒಂದೆರಡು ದಿನಗಳಲ್ಲಿ ಹೆಚ್ಚಿನ ಕೋವಿಡ್ ಲಸಿಕೆ ಲಭ್ಯ: ಬಿ.ಎಸ್.ಯಡಿಯೂರಪ್ಪ

ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಶುಕ್ರವಾರ ಶಿಕಾರಿಪುರ ತಾಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್ ಮುಂದಿನ ಒಂದು ವಾರದಲ್ಲಿ ಹತೋಟಿಗೆ ಬರುವ ನಿರೀಕ್ಷೆ ಹೊಂದಲಾಗಿದೆ. ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರೋನಾ ಪ್ರಮಾಣ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಕರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು.

ಶಿಕಾರಿಪುರ ತಾಲೂಕಿನ ಪ್ರಮುಖ ನೀರಾವರಿ ಯೋಜನೆಗಳು ಬಹುತೇಕ ಅಂತಿಮ ಹಂತದಲ್ಲಿವೆ. ಈ ಯೋಜನೆಗಳ ಮೂಲಕ ಬರಪೀಡಿತವಾಗಿರುವ ಉಡುಗುಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ ಬಹುತೇಕ ಕೆರೆಗಳನ್ನು ಈ ಮಳೆಗಾಲದಲ್ಲಿ ತುಂಬಿಸುವ ವಿಶ್ವಾಸ ನನಗಿದೆ. ಶೇ.90ರಷ್ಟು ಕಾಮಗಾರಿಗಳು ಈಗಾಗಲೇ ಮುಗಿದಿದ್ದು, ಈ ಭಾಗದ ಹಲವು ವರ್ಷಗಳ ಕನಸು ಇದರಿಂದ ನನಸಾಗಲಿದೆ ಎಂದರು.
ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗಾಗಿ ದೊಡ್ಡ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಯೋಜನೆಯನ್ನು ತ್ವರಿತಗೊಳಿಸಬೇಕು. ಭೂಸ್ವಾಧೀನ ಪ್ರಕ್ರಿಯೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಯೋಜನೆ ಅನುಷ್ಟಾನಗೊಳಿಸಬೇಕು. ತಾಲೂಕಿನಲ್ಲಿ ಮಂಜೂರಾಗಿರುವ 10ಕೆವಿ ವಿದ್ಯುತ್ ಸ್ಟೇಷನ್‍ಗಳ ನಿರ್ಮಾಣ ಕಾರ್ಯವನ್ನು ಸಹ ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.

ತಾಲೂಕಿನ ಪ್ರತಿಯೊಬ್ಬರ ಅರ್ಹ ಬಡವರಿಗೂ ಮನೆ ನಿರ್ಮಿಸಿ ನೀಡಬೇಕು. ಇದಕ್ಕಾಗಿ ಆಶ್ರಯ ನಿವೇಶನ ಲಭ್ಯವಿಲ್ಲದಿದ್ದರೆ, ನಿವೇಶನ ಖರೀದಿಸಲು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಪ್ರತಿ ಅರ್ಹರಿಗೂ ಮನೆಯನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ

ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು. ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಸೌಲಭ್ಯ ಸಕಾಲದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳು ನಿರೀಕ್ಷೆಯಂತೆ ಅನುಷ್ಟಾನಗೊಳ್ಳುತ್ತಿದೆ. ಉಡುಗುಣಿ ತಾಳಗುಂದ ಏತ ನೀರಾವರಿ ಯೋಜನೆ ಮುಂದಿನ ತಿಂಗಳು ಪೂರ್ಣಗೊಳ್ಳಲಿದೆ. ಕಸಬಾ ನೀರಾವರಿ ಯೋಜನೆ ಶೇ.50ರಷ್ಟು ಪೂರ್ಣಗೊಂಡಿದೆ. ಹೊಸಳ್ಳಿ-ಅಂಜನಾಪುರ ಯೋಜನೆಯ ಪೈಪ್‍ಲೈನ್ ಕಾರ್ಯ ನಡೆಯುತ್ತಿದೆ. ಯೋಜನೆಗೆ ಯಾವುದೇ ಆರ್ಥಿಕ ಅಡಚಣೆ ಇರುವುದಿಲ್ಲ. ತಾಲೂಕಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಇದುವರೆಗೆ ತಾಲೂಕಿನಲ್ಲಿ 45ಸಾವಿರ ಮಂದಿಗೆ ಪ್ರಥಮ ಡೋಸ್ ಮತ್ತು 5ಸಾವಿರ ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದರು.

ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ

ಶ್ರಮಿಕ ವರ್ಗದ ಜನರ ಖಾತೆಗಳಿಗೆ ಸಹಾಯಧನವನ್ನು ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಬ್ಯಾಂಕ್‌ನವರು ಈ ಹಣವನ್ನು ಹಳೆಯ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚಿಸಲಾಗಿದೆ. ಒಂದು ವೇಳೆ ಈ ರೀತಿಯ ಪ್ರಕರಣಗಳು ಕಂಡುಬಂದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ನಗರಾಭಿವೃದ್ಧಿ ಸಚಿವಿ ಬೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ಎಂಎಡಿಬಿ ಅದ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್,ಜಿ.ಪಂ.ಸಿಇಒ ವೈಶಾಲಿ ಮತ್ತಿತರರಿದ್ದರು.

Ad Widget

Related posts

ಮಲೆನಾಡಲ್ಲಿ ವರ್ಷಧಾರೆ, ಚುರುಕಾದ ಕೃಷಿ ಚಟುವಟಿಕೆ, ಭರ್ತಿಯತ್ತ ಗಾಜನೂರು ಡ್ಯಾಂ, ಮಾಣಿಯಲ್ಲಿ ದಾಖಲೆ, ಜೋಗಕ್ಕೆ ಜೀವಕಳೆ

Malenadu Mirror Desk

ಅಂದಗಾತಿಯ ಸಾವಿನ ಹಿಂದಿನ ಕರಾಳ ಮುಖ ಗೊತ್ತೆ ? ಆನೆಗದ್ದೆಯ ಮನೆಯೊಂದರಲಿ ಒಂದು ತಿಂಗಳಲ್ಲಿ ಎರಡು ಆತ್ಮಹತ್ಯೆನಡೆದದ್ದಾದರೂ ಯಾಕೆ ?

Malenadu Mirror Desk

ನೆಲದ ಅಂತಸತ್ವ ಅರಿಯಬೇಕು: ಬಿ.ಆರ್.ಬಸವರಾಜಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.