Malenadu Mitra
ರಾಜ್ಯ ಶಿವಮೊಗ್ಗ

ಗ್ರಾಮಗಳ ಸಮಗ್ರ ಅಭಿವೃದ್ಧಿ ಗ್ರಾಮ ಪಂಚಾಯತ್ ಜವಾಬ್ದಾರಿ: ಸಚಿವ ಕೆ.ಎಸ್.ಈಶ್ವರಪ್ಪ

ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳಿಗೆ ಕಾರ್ಯಾಗಾರ
ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗವನ್ನು ನೀಡುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯತ್‍ಗಳದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಶನಿವಾರ ಪ್ರೇರಣಾ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಯಾ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕುಳಿತು ಚರ್ಚಿಸಿ ಅಂತಿಮಗೊಳಿಸಬೇಕು. ಗ್ರಾಮವನ್ನು ಕುಟುಂಬ ಎಂದು ಪರಿಗಣಿಸಿ ಅಭಿವೃದ್ಧಿ ಕಾರ್ಯಗಳ ಅನುಷ್ಟಾನಗೊಳಿಸಬೇಕು. ಗ್ರಾಮದಲ್ಲಿ ಕೆಲಸ ಕೇಳಿಕೊಂಡು ಬರುವ ಪ್ರತಿಯೊಬ್ಬರಿಗೂ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವನ್ನು ಕಲ್ಪಿಸಬೇಕು ಎಂದು ಹೇಳಿದರು.

ಕೆರೆ ಕಟ್ಟೆಗಳ ಅಭಿವೃದ್ಧಿ ಜವಾಬ್ದಾರಿಯನ್ನು ಇದೀಗ ಗ್ರಾಮ ಪಂಚಾಯತ್‍ಗಳಿಗೆ ನೇರವಾಗಿ ವಹಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್ ತಮ್ಮ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಬೇಕು. ಇದೀಗ ಪ್ರತಿ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವುದು ಗ್ರಾಮ ಪಂಚಾಯತ್‍ಗಳ ಜವಾಬ್ದಾರಿ. ಸ್ವಚ್ಛ ಭಾರತ್ ಯೋಜನೆಯಡಿ ಎಸ್‍ಸಿ/ಎಸ್‍ಟಿ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯಧನವನ್ನು ಇದೀಗ 20ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಯೋಜನೆಗಳ ಸಮರ್ಪಕ ಅನುಷ್ಟಾನ

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಕೇಂದ್ರ ಸರ್ಕಾರ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 2256 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ರೀತಿಯ ಕಾರ್ಯಾಗಾರಗಳ ಮೂಲಕ ಯೋಜನೆಗಳ ಸಮರ್ಪಕ ಅನುಷ್ಟಾನ ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಸ್ವಾಗತಿಸಿದರು. ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೆ ಗ್ರಾಮ ಪಂಚಾಯತ್ ಹಂತದಲ್ಲಿ ಅನುಷ್ಟಾನಗೊಳಿಸುವ ಯೋಜನೆಗಳ ಕುರಿತು ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಲಾಗುತ್ತಿದೆ ಎಂದರು.

ಶಾಸಕರಾದ ಹರತಾಳು ಹಾಲಪ್ಪ, ಆಯನೂರು ಮಂಜುನಾಥ್, ಪ್ರಸನ್ನ ಕುಮಾರ್, ರುದ್ರೇಗೌಡ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Ad Widget

Related posts

ಕಾಗೋಡು ತಿಮ್ಮಪ್ಪರನ್ನು ಅವಿರೋಧ ಆಯ್ಕೆ ಮಾಡಲಿ, ಹಿರಿಯ ಜನನಾಯಕನಿಗೆ ಗೆಲುವಿನ ನಿವೃತ್ತಿ ಕೊಡಲಿ ಎಲ್ಲಾ ಪಕ್ಷಗಳಿಗೂ ಅಭಿಮಾನಿಗಳ ಮನವಿ

Malenadu Mirror Desk

ಮತ ನೀಡುವ ಮೂಲಕ ಗೀತಾರ ಉಡಿತುಂಬಿ, ಹಾರನಹಳ್ಳಿಯ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಆಯನೂರು ಮಂಜುನಾಥ್‌ ಮನವಿ

Malenadu Mirror Desk

ಅಡಕೆ ನುಂಗಿ ಮಗು ಸಾವು: ಹೆತ್ತವರ ಆಕ್ರಂದನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.