Malenadu Mitra
ರಾಜ್ಯ ಶಿವಮೊಗ್ಗ

ಗ್ರಾಮೀಣ ರಸ್ತೆ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳ ನಿರ್ಮಾಣಕ್ಕೆ ಆದ್ಯತೆ : ಕೆ.ಎಸ್.ಈಶ್ವರಪ್ಪ


ಮಳೆಯಿಂದ ತೀವ್ರ ತರಹದ ಹಾನಿಗೊಳಗಾಗಿ ರಸ್ತೆ ಸಂಪರ್ಕ ಕಳೆದುಕೊಂಡಿರುವ ಮಲೆನಾಡಿನ ಗ್ರಾಮೀಣ ಪ್ರದೇಶಗಳಿಗೆ ವ್ಯವಸ್ಥಿತ ಹಾಗೂ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಶಾಸಕ ಹರತಾಳು ಹಾಲಪ್ಪ ಅವರೊಂದಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಇರುವಕ್ಕಿ, ಕೆದಲೂರು, ಬ್ಯಾಡರಕೊಪ್ಪ, ತ್ಯಾಗರ್ತಿ ಹಾಗೂ ಸೊರಬ ತಾಲೂಕಿನ ಉದ್ರಿ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾಗಿರುವ ಗ್ರಾಮೀಣ ರಸ್ತೆ, ಸೇತುವೆ, ಜಮೀನು, ಭೂಕುಸಿತ, ಬಿದ್ದಿರುವ ಮನೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮಗಳೊಂದಿಗೆ  ಮಾತನಾಡಿದರು.

ಕಳೆದ ಸಾಲಿನಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೬೯ ಕಿರುಸೇತುವೆಗಳನ್ನು ನಿರ್ಮಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿಯೂ ಸಂಪರ್ಕ ಕಳೆದುಕೊಂಡಿರುವ ಸೊರಬ ಸಾಗರ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಗ್ರಾಮಗಳಿಗೆ ಹೆಚ್ಚೆಚ್ಚು ಕಿರುಸೇತುವೆಗಳನ್ನು ನಿರ್ಮಿಸಿಕೊಡಲಾಗುವುದು ಎಂದ ಅವರು ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಸಚಿವರೊಂದಿಗೆ ಶೀಘ್ರದಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ಹೊಸ ಮಂತ್ರಿಮಂಡಲ ರಚನೆಯಾಗಿದ್ದು  ಮಾನ್ಯ ಮುಖ್ಯಮಂತ್ರಿಗಳು ಆಯಾ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರುವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಮಾದರಿ ರಾಜ್ಯ ನಿರ್ಮಾಣಕ್ಕೆ ಶ್ರಮಿಸಲಾಗುವುದು ಎಂದರು.
ವಿಶೇಷವಾಗಿ ಜಿಲ್ಲೆಯ ಇಬ್ಬರು ಶಾಸಕರಿಗೆ ಪ್ರಮುಖವಾದ ಎರಡು ಖಾತೆಗಳನ್ನು ನೀಡಿರುವುದು ಜಿಲ್ಲೆಯ ಜನರಲ್ಲಿ ಹರ್ಷ ಮೂಡಿಸಿದೆ. ಪ್ರಸ್ತುತ ತಾವು ನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಕೇಂದ್ರ ಪುರಸ್ಕೃತ ನರೇಗಾ, ಸ್ವಚ್ಚ ಭಾರತ್, ಮನೆಮನೆಗೆ ಗಂಗೆ ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು. ಈ ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರೆಸಲಾಗುವುದು ಎಂದರು.


ಮಲೆನಾಡಿನಲ್ಲಿ ಪದೆಪದೆ ಅಡಿಕೆ ಬೆಳೆ ಕೊಳೆರೋಗಕ್ಕೆ ಒಳಗಾಗುತ್ತಿದೆ. ಅದರ ನಿಯಂತ್ರಣಕ್ಕಾಗಿ ಸಂಶೋಧನೆಗಳು ನಡೆಯುತ್ತಿವೆ. ಅದಕ್ಕಾಗಿ ಟಾಸ್ಕ್ ಫೋರ್ಸ್‌ನ್ನು ರಚಿಸಲಾಗಿದ್ದು, ಶೀಘ್ರದಲ್ಲಿ ಸಂಶೋಧನೆಯ ಫಲ ಲಭಿಸಲಿದೆ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ಹರತಾಳು ಹಾಲಪ್ಪ ಅವರು ಮಾತನಾಡಿ, ಮಾನ್ಯ ಸಚಿವರೊಂದಿಗೆ ಮಳೆಯಿಂದ ಧರೆಕುಸಿತ, ಮನೆ, ಸೇತುವೆ ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ ಸಿಇಓ  ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ನಾಗರಾಜ್ ಸಿಂಗ್ರೇರ್ ,ಟಿ ಡಿ ಮೇಘರಾಜ್, ರಾಜಶೇಖರ್ ಗಾಳಿಪುರ ಮತ್ತಿತರರಿದ್ದರು

Ad Widget

Related posts

ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್

Malenadu Mirror Desk

ಜನಸಾಮಾನ್ಯರಿಗೆ ನಿವೇಶನಗಳನ್ನು ನೀಡಲು ಲೇಔಟ್ ಸಿದ್ದಪಡಿಸಲು ಸಚಿವ ಬೈರತಿ ಸುರೇಶ್ ಸೂಚನೆ

Malenadu Mirror Desk

ರಾಗಿಗುಡ್ಡ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮಧುಬಂಗಾರಪ್ಪ, ಶಾಂತಿಯಿಂದ ಇರಲು ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.