ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೆರೆಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರ ಮತ್ತ ಗ್ರಾಮೀಣ ಪ್ರದೇಶಗಳಲ್ಲಿನ ನಿವಾಸಿಗಳಿಗೆ ತೀವ್ರತರಹದ ಹಾನಿಯುಂಟಾಗಿದ್ದು, ಹಲವು ವರ್ಷಗಳಿಂದ ಕಂಡುಬರುತ್ತಿರುವ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ, ಮಹಾನಗರಪಾಲಿಕೆ ಆಯುಕ್ತರು, ಸ್ಮಾರ್ಟ್‌ಸಿಟಿ ಲಿ.,ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪಾಲಿಕೆಯ ಸದಸ್ಯರೊಂದಿಗೆ ನಗರದ ವಿವಿಧ ಬಡಾವಣೆಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದರು.
ಪ್ರಸಕ್ತ ಮಾಹೆಯಲ್ಲಿ ಕಳೆದ ಹಲವು ದಶಕಗಳ ಹಿಂದಿನ ಸರಾಸರಿ ಮಳೆಯನ್ನು ಗಮನಿಸಿದಾಗಿ ಸುಮಾರು ವಾಡಿಕೆ ಮಳೆಗಿಂತ ೪ಪಟ್ಟು ಹೆಚ್ಚಿನ ಮಳೆ ಒಂದೆರೆಡು ದಿನದಲ್ಲಿ ಆಗಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ಕೂಲಂಕಶವಾಗಿ ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗುವುದು ಎಂದರು.
ನಗರದ ತಗ್ಗು ಪ್ರದೇಶಗಳಲ್ಲಿನ 8-10 ವಾರ್ಡುಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು, ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಲ್ಲಿನ ದಿನಸಿ, ಮತ್ತಿತರ ಸಾಮಗ್ರಿಗಳು ಹಾನಿಗೊಳಗಾಗಿವೆ. ಈಗಾಗಲೇ 2 ಮನೆಗಳು ಕುಸಿದಿರುವ ಮಾಹಿತಿ ಇದೆ. ಮತ್ತೆ ಕೆಲವು ಮನೆಗಳು ಕುಸಿಯುವ ಹಂತದಲ್ಲಿವೆ. ಇವುಗಳ ಸಮಗ್ರ ಮಾಹಿತಿ ಪಡೆದು, ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂಬಂಧ ನಿನ್ನೆ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪನವರೂ ಕೂಡ ಸಂಬಂಧಿಸಿದ ಇಲಾಖಾಧಿಕಾರಿಗಳೊಂದಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅಂತೆಯೇ ನಗರ ಪ್ರದೇಶದಲ್ಲಿನ ಸಂತ್ರಸ್ಥರಿಗೆ 9 ಆಯ್ದ ಸ್ಥಳಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ತಾತ್ಕಾಲಿಕ ಅವಧಿಗೆ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದವರು ನುಡಿದರು.
ಮಳೆಯ ಪ್ರಮಾಣ ಕಡಿಮೆಯಾಗಿ ಸಹಜ ಸ್ಥಿತಿಗೆ ಮರಳುವವರೆಗೆ ಜಿಲ್ಲೆಯಲ್ಲಿನ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಜೆಯ ಮೇಲೆ ತೆರಳದಂತೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜನರ ಸಂಕಷ್ಟಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ವೆಂಕಟೇಶನಗರ, ಗಾಂಧಿನಗರ, ಬಾಪೂಜಿನಗರ, ಶಾಂತಮ್ಮಲೇಔಟ್, ಮಂಡ್ಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಸದರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್‌ಗನ್ನಿ, ಜಗದೀಶ್, ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ಚಿದಾನಂದ ವಟಾರೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ಕೆಲವು ತಾಲೂಕುಗಳಲ್ಲಿಯೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿರುವ ಮಾಹಿತಿ ಇದೆ. ಸುಮಾರು 25000ರಿಂದ 80,000 ಹೆಕ್ಟೇರ್ ಪ್ರದೇಶದಲ್ಲಿನ ಮೆಕ್ಕೆಜೋಳ, 1500 ಹೆಕ್ಟೇರ್ ಇತರೆ ಬೆಳೆ, 150 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಯಾಗಿರುವ ಬಗ್ಗೆ ಅಂದಾಜು ಮಾಹಿತಿ ಇದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಈ ಸಂಬಂಧ ಪರಿಹಾರಧನ ಬಿಡುಗಡೆಗೊಳಿಸುವಂತೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳಲ್ಲಿ ನಿವೇದಿಸಿಕೊಳ್ಳಲಾಗಿದೆ
- ಬಿ.ವೈ.ರಾಘವೇಂದ್ರ, ಸಂಸದ