ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ಹೇಳಿದರು.
ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣೆ, ತರಬೇತಿ ಮತ್ತು ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಕಾರ್ಮಿಕರ ಬದುಕನ್ನು ಹಸನು ಮಾಡಲು ಪಣ ತೊಟ್ಟು ಅನೇಕ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇಂದು ಚಾಲನೆ ನೀಡಲಾದ ಉಚಿತ ಆರೋಗ್ಯ ತಪಾಸಣೆಯಲ್ಲಿ ೨೧ ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಖಾಸಗಿಯಲ್ಲಿ ಮಾಡಿಸಿದರೆ ಒಬ್ಬರಿಗೆ ರೂ.೧೨ ಸಾವಿರದವರೆಗೆ ವೆಚ್ಚ ತಗುಲುತ್ತದೆ. ಇಂತಹ ಪರೀಕ್ಷೆಯನ್ನು ಮೊದಲ ಹಂತದಲ್ಲಿ ಸುಮಾರು ೩೦ ಸಾವಿರ ಕಾರ್ಮಿಕರಿಗೆ ಮಾಡಲಾಗುತ್ತಿದೆ. ಕಾರ್ಮಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಹೇಳಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಇಂದು ವಲಸೆ ಕಾರ್ಮಿಕರ ಸೂರಿಗಾಗಿ ವಸತಿ ಸಮುಚ್ಚಯ, ಉಚಿತ ಆರೋಗ್ಯ ತಪಾಸಣೆ, ಭದ್ರಾವತಿಯಲ್ಲಿ ರೂ.೭ ಕೋಟಿ ವೆಚ್ಚದಲ್ಲಿ ಕಾರ್ಮಿಕರ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆಯಂತಹ ಅಭಿವೃದ್ದಿ ಕೆಲಸಗಳು ನಡೆಯುತ್ತಿರುವುದು ಸಂತಸದ ವಿಚಾರ. ಇನ್ನು ೨-೩ ದಿನದಲ್ಲಿ ಕಾರ್ಮಿಕರು ಇರುವಲ್ಲಿಯೇ ಸಂಚಾರಿ ವಾಹನದಲ್ಲಿ ಆರೋಗ್ಯ ತಪಾಸಣೆ ಸಹ ನಡೆಯಲಿದೆ. ಮೇಜರ್ ಶಸ್ತ್ರಚಿಕಿತ್ಸೆಗಳಿದ್ದಲ್ಲಿ ವೆಚ್ಚ ಮರುಪಾವತಿ ವ್ಯವಸ್ಥೆ ಇದೆ. ಅಸಂಘಟಿತ ಕಾರ್ಮಿಕರ ಅಭಿವೃದ್ದಿಗಾಗಿ ಇ-ಶ್ರಮ್ ನೋಂದಣಿ ಗುರಿ ತಲುಪಬೇಕು. ವಿವಿಧ ರೀತಿಯ ಕಾರ್ಮಿಕರು, ಆಶಾ, ಅಂಗನವಾಡಿ, ಕ್ಷೌರಿಕ, ಬ್ಯೂಟಿಪಾರ್ಲರ್‌ನವರು ಇ-ಶ್ರಮ್ ತಂತ್ರಾಂಶದಡಿ ಸಿಎಸ್‌ಸಿ, ಗ್ರಾಮ ಒನ್ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸಾಂಕೇತಿಕವಾಗಿ ಇ-ಶ್ರಮ್ ಗುರುತಿನ ಚೀಟಿ, ಪೈಂಟ್ ಕಿಟ್ ವಿತರಿಸಲಾಯಿತು.
ಶಾಸಕರಾದ ಕೆ.ಬಿ ಅಶೋಕ್‌ನಾಯ್ಕ, ಅರುಣ್.ಡಿ.ಎಸ್, ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ದತ್ತಾತ್ರಿ ಎಸ್, ಪಾಲಿಕೆ ಉಪಮಹಾಪೌರ ಶಂಕರ್ ಗನ್ನಿ, ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಸದಸ್ಯರು, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಸಿಇಓ ಗುರುಪ್ರಸಾದ್ ಎಂ.ಪಿ ಜಿಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮತ್ತಿತರರಿದ್ದರು.
ಕಾರ್ಮಿಕರ ವಸತಿ ಸಮುಚ್ಚಯಕ್ಕೆ ಹೆಚ್ಚುವರಿ ಅನುದಾನ

ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ ೧೦ ಎಕರೆ ಜಾಗದಲ್ಲಿ ೧೦ಕೋಟಿ ರೂ.ಗಳ ವೆಚ್ಚದಲ್ಲಿ ೫೦೦ ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ವಸತಿ ಸಮುಚ್ಛಯವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಹೆಚ್ಚುವರಿ ೫೦೦ ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸಿದ್ಲೀಪುರದಲ್ಲಿ ಕಾರ್ಮಿಕರಿಗೆ ವಸತಿ ಸಮುಚ್ಛಯ ಕಾಮಗಾರಿಯ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಮಾತನಾಡಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸಕಾಲದಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಹಸ್ತಾಂತರಿಸುವಂತೆ ಸೂಚಿಸಿದರು.
ಶೇ.೪೦ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳ ಸಚಿವಾಲಯ ತನಿಖೆ ಆರಂಭಿಸಿರುವುದು ಸ್ವಾಗತಾರ್ಹ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿ. ದಾಖಲೆಗಳಿದ್ದರೆ ಯಾರು ತಪ್ಪು ಮಾಡಿದ್ದಾರೆ ಎಂಬದು ಗೊತ್ತಾಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ತನಿಖೆಗೆ ಆದೇಶ ಮಾಡಿದ್ದಕ್ಕೆ ಪ್ರಧಾನಮಂತ್ರಿ ಸಚಿವಾಲಯಕ್ಕೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ
–ಶಿವರಾಮ ಹೆಬ್ಬಾರ್, ಕಾರ್ಮಿಕ ಸಚಿವ .


