ಸೊರಬ: ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ತಮಗಿದ್ದು, ಸರಕಾರದಿಂದ ದೊರೆಯುವ ಸೌಲಭ್ಯಗಳು ಪಕ್ಷಾತೀತವಾಗಿ ಹಾಗೂ ಪರಿಣಾಮಕಾರಿ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಜವಾಬ್ದಾರಿ ಎಲ್ಲಾ ಅಧಿಕಾರಿಗಳ ಮೇಲಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಹಿಂಭಾಗದಲ್ಲಿ ಸಚಿವರ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ, ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಶಾಸಕನಾಗಿ ಜನತೆ ಆಯ್ಕೆ ಮಾಡಿದರೆ, ಸಚಿವನಾಗುವುದಾಗಿ ತಿಳಿಸಿದ್ದೆನು. ಆದರೆ, ಸಚಿವ ಎಂಬ ಅಹಂ ನನಲ್ಲಿಲ್ಲ. ನಾನೊಬ್ಬ ಸಾಮಾನ್ಯ ಪ್ರಜೆಯಾಗಿದ್ದು, ಕ್ಷೇತ್ರದ ಸೇವಕನಾಗಿದ್ದೇನೆ. ಜನತೆ ಹಲವಾರು ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಅವುಗಳನ್ನು ಹಂತಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಶಾಸಕನಾಗಿ ಕ್ಷೇತ್ರದ ಬಗ್ಗೆ ಸಂಪೂರ್ಣ ಚಿತ್ರಣ ಹೊಂದಿದ್ದೇನೆ. ಸಚಿವರಾದ ತರುವಾಯ ಕ್ಷೇತ್ರಕ್ಕೆ ಹತ್ತು ಪಟ್ಟು ಅಭಿವೃದ್ಧಿ ಕಾರ್ಯ ಮಾಡುವ ಶಕ್ತಿಯನ್ನು ಕಾಂಗ್ರೆಸ್‌ನ ವರಿಷ್ಠರು ಕಲ್ಪಿಸಿದ್ದಾರೆ ಎಂದರು.
ಸಭೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ಡಾ.ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಹುಸೇನ್ ಸರಕಾವಸ್, ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದಗೌಡ ಬಿಳಗಲಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಮಹಿಳಾ ಘಟಕದ ಅಧ್ಯಕ್ಷರಾದ ಸುಜಾತಾ ಜೋತಾಡಿ, ವಿಶಾಲಾಕ್ಷಿ, ಜಿ.ಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ, ಯುವ ಘಟಕದ ಅಧ್ಯಕ್ಷ ಕೆ.ಪಿ.ಪ್ರವೀಣ್ ಕುಮಾರ್, ಮುಖಂಡರಾದ ಎಚ್.ಗಣಪತಿ, ಎಂ.ಡಿ.ಶೇಖರ್, ನಾಗರಾಜಗೌಡ ಶಿಕಾರಿಪುರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರಿದ್ದರು.
ಸಚಿವ ಎಂಬ ಅಹಂ ನನಲ್ಲಿಲ್ಲ. ನಾನೊಬ್ಬ ಸಾಮಾನ್ಯ ಪ್ರಜೆಯಾಗಿದ್ದು, ಕ್ಷೇತ್ರದ ಸೇವಕನಾಗಿದ್ದೇನೆ. ಜನತೆ ಹಲವಾರು ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಅವುಗಳನ್ನು ಹಂತಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
ಎಸ್.ಮಧು ಬಂಗಾರಪ್ಪ