ಶಿವಮೊಗ್ಗ ಜು.೧೨: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯಗಳನ್ನು ನೀಡುತ್ತಿದ್ದು, ಅದರಂತೆ ಮಲೆನಾಡು ಭಾಗದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಭಾಗ್ಯ ನೀಡುವಂತೆ ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನ. ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ, ಇಂದಿನ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ಶರಾವತಿ ಸಂತ್ರಸ್ತರ ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗಳು ಸೇರಿದಂತೆ ಮಲೆನಾಡು ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮಾತು ಕೊಟ್ಟಿದ್ದವು. ಆದರೆ ಸಮಸ್ಯೆಗಳು ಹಾಗೇ ಉಳಿದಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು ೧೫ ದಿನದ ಒಳಗಾಗಿ ಬಗೆಹರಿಸುವುದಾಗಿ ಹೇಳಿದ್ದರು. ರಾಘವೇಂದ್ರ ಅವರು ಈಗ ಸುಮ್ಮನಾಗಿದ್ದಾರೆ. ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಬೇಕು ಇಲ್ಲದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆ.೧೫ರಿಂದ ಚಳುವಳಿ ಆರಂಭಿಸಲಾಗುವುದು ಎಂದರು.
ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಕುಂಚೇನಹಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ರೈತರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ದೌರ್ಜನ್ಯ ಆರಂಭಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲೆಗೆ ಬಂದು ರೈತರ ಸಮಸ್ಯೆ ಸೇರಿದಂತೆ ಮಲೆನಾಡು ಭಾಗದ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತೀರ್ಥನಾಯ್ಕ, ವಾಸುದೇವ ನಾಯ್ಕ, ಶಿವಾಜಿ ನಾಯ್ಕ, ಜಯರಾಮ್ ನಾಯ್ಕ, ವಿನಾಯಕ ಇದ್ದರು.
previous post