ಶಿವಮೊಗ್ಗ: ಚಲಿಸುವ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಕ್ರೆಬೈಲು ಬಳಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕ ಮತ್ತು ಬಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ 18 ಜನ ಪ್ರಯಾಣಿಕರಿದ್ದರು. ರಾತ್ರಿ ಹೊರಟಿದ್ದ ಖಾಸಗಿ ಬಸ್, ಬೆಳಗಿನ ಜಾವ ಸಕ್ರೆಬೈಲು ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ಸುಟ್ಟು ಹೋಗಿದ್ದು, ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.