ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.
ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ನೇತೃತ್ವದಲ್ಲಿ ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ರೈತರು, ಎಂ ಎಸ್ ಪಿ ಯನ್ನು ಕಾನೂನಾತ್ಮಕವಾಗಿ ಜಾರಿ ಮಾಡಬೇಕು ಹಾಗೂ ವಿದ್ಯುಚ್ಛಕ್ತಿ ಖಾಸಗಿಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆ ದೆಹಲಿ ಹೊರ ವಲಯದಲ್ಲಿ ಬೇಡಿಕೆಗಳ ಈಡೇರಿಕೆಗೆ ರೈತರು 13 ತಿಂಗಳ ಕಾಲ ನಿರಂತರ ಹೋರಾಟ ನಡೆಸಿದ್ದರು. ಈ ಹೋರಾಟಕ್ಕೆ ಮಣಿದಿದ್ದ ಕೇಂದ್ರ ಸರ್ಕಾರ ಲಿಖಿತ ಭರವಸೆ ಸಹ ನೀಡಿತ್ತು. ಭರವಸೆ ನೀಡಿ ಎರಡು ವರ್ಷ ಕಳೆದರೂ ಸರ್ಕಾರ ಎಂಎಸ್ಪಿ ಜಾರಿ ಮಾಡಿಲ್ಲ. ಹೀಗಾಗಿ ಹರಿಯಾಣದ ಶಂಭು ಗಡಿಯಲ್ಲಿ ರೈತರು ಮತ್ತೆ ಹೋರಾಟ ಆರಂಭಿಸಿದ್ದಾರೆ. ಅದರಲ್ಲೂ ರೈತ ನಾಯಕ ಜಗತ್ ಸಿಂಗ್ ದಲ್ಲೈವಾಲ ಅವರು 38 ದಿನದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ಆರೋಗ್ಯ ಹದಗೆಡುತ್ತಿದ್ದು, ಸರ್ಕಾರ ಕೂಡಲೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ರೈತರು ಒತ್ತಾಯಿಸಿದ್ದಾರೆ.
ಈ ನಡುವೆ ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಸಮಸ್ಯೆ ಇತ್ಯರ್ಥಕ್ಕೆ ಸೂಚನೆ ಕೊಟ್ಟಿದ್ದು, ಸರ್ಕಾರಗಳು ಕೂಡಲೇ ಸ್ಪಂದಿಸಬೇಕು. ಇಲ್ಲವಾದರೇ ಹೋರಾಟವನ್ನ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾನಿರತ ರೈತರು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ರೈತರಾದ ಹಿಟ್ಟೂರು ರಾಜು, ಕೆ.ರಾಘವೇಂದ್ರ, ಹನುಮಂತಪ್ಪ, ಪಂಚಾಕ್ಷರಿ, ನಾಗರಾಜ್ ಮಳವಳ್ಳಿ ಮತ್ತಿತರರು ಉಪಸ್ಥಿತರಿದ್ದರು.
previous post