ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ, ಪೊಲೀಸ್ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಎಲ್ಲವೂ ಸರಿ ಇದೆ
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ
ಕೈಗೊಳ್ಳಲಾಗುವುದು. ಈಗಾಗಲೇ ಪೊಲೀಸ್ ಇಲಾಖೆ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈ
ಹಿಂದೆ ಡಿಜೆ ಹಳ್ಳಿಯಲ್ಲಿ ಆದ ಗಲಾಟೆಗೆ ಸಂಬಂಧಿಸಿದಂತೆ ಸರ್ಕಾರ ಅಗತ್ಯ ಕ್ರಮ
ಕೈಗೊಳ್ಳಲಾಗಿತ್ತು. ಈ ಪ್ರಕರಣವನ್ನು ಸಹ ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ನಿಧಿ ಸಂಗ್ರಹಿಸುತ್ತಿರುವುದರ ಬಗ್ಗೆ
ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಯಾವ ಸಂಘಟನೆಯವರು ಏನು ಬೇಕಾದರೂ
ಮಾಡಿಕೊಳ್ಳಲಿ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದರು.
ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಸ್ವಾಮೀಜಿಗಳು ನೀಡಿದ್ದ ಗಡುವು
ಮುಗಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಷಯ ಹಿಂದುಳಿದ ವರ್ಗಗಳ ಆಯೋಗದ
ಮುಂದಿದೆ. ಅವರು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಎಸ್.ರುದ್ರೇಗೌಡ, ಡಿ.ಎನ್.ಜೀವರಾಜ್, ಮೇಯರ್ ಸುನೀತಾ ಅಣ್ಣಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ದತ್ತಾತ್ರಿ ಮತ್ತಿತರರಿದ್ದರು.
previous post