Malenadu Mitra
ರಾಜ್ಯ ಶಿವಮೊಗ್ಗ

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ  ಕ್ರಮ, ಶಿವಮೊಗ್ಗದಲ್ಲಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸಿತರಿಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
   ಬುಧವಾರ ಶಿವಮೊಗ್ಗ ನಗರದ ಎನ್‌ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು

ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ಧಿ ಹೊಂದಲಿದೆ. ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ರೂ.೫೦೦ ಕೋಟಿ ಮಂಜೂರು ಮಾಡಿದೆ ಎಂದರು.

ವಿಐಎಸ್‌ಎಲ್ ಸಮಸ್ಯೆ ಬಗೆಹರಿಸುವ ಕುರಿತು ಮುಂದಿನ ವಾರ ಬೆಂಗಳೂರಿನಲ್ಲಿ ಎಲ್ಲಾ ಪ್ರತಿನಿಧಿಗಳ ಸಭೆ ನಡೆಸಿ, ಈ ಕಾರ್ಖಾನೆಯನ್ನು ಮುಂದುವರಿಸುವ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು  ಅವರು  ತಿಳಿಸಿದರು.
ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ:
ಮುಖ್ಯಮಂತ್ರಿ ಅವರು ನಗರದ ಹೊರವಲಯದ ಗೋವಿಂದಪುರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳಡಿ ನಿರ್ಮಿಸಲಾಗುತ್ತಿರುವ ೩ ಸಾವಿರ ಮನೆಗಳ ಪೈಕಿ ಪೂರ್ಣಗೊಂಡಿರುವ ೨೮೮ ಮನೆಗಳನ್ನು ಹಸ್ತಾಂತರಿಸಿ ೭೦೦ ಫಲಾನುಭವಿಗಳಿಗೆ ಅಂತಿಮ ಹಂಚಿಕೆ ಪತ್ರ ವಿತರಿಸಿದರು.  
      ಶಾಸಕ ಕೆ.ಎಸ್.ಈಶ್ವರಪ್ಪ ಪ್ರಾಸ್ತಾವಿಕ ಮಾತನಾಡಿದರು. ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಕೆ.ಬಿ.ಅಶೋಕ ನಾಯ್ಕ್, ಆಯನೂರು ಮಂಜುನಾಥ, ಭಾರತಿ ಶೆಟ್ಟಿ,  ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿ ಎಸ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Ad Widget

Related posts

ಅಂಗನವಾಡಿ,ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Malenadu Mirror Desk

ತಿಂಗಳ ಸಂಬಳ ಕೊರೊನ ನಿರ್ವಹಣೆಗೆ

Malenadu Mirror Desk

ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು: ಡಾ. ಜಯಶಂಕರ್ ಕಂಗಣ್ಣಾರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.