ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ
ಶಿವಮೊಗ್ಗ: ನಗರದಲ್ಲಿ ಹಾದು ಹೋದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಆಯೋಜಿಸಿದ್ದ
ಕ್ಷೇತ್ರದಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿಗಳಾದ 206, 766ಸಿ, 69, 169 ರ ಒಟ್ಟು 8 ಪ್ಯಾಕೇಜ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಗೆ ಮಂಜೂರಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ, ಅರಣ್ಯ ಭೂಮಿ ಬಿಡುಗಡೆಯ ಸಮಸ್ಯೆಗಳನ್ನು ಪರಿಹರಿಸಿ ಶೀಘ್ರ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅರಣ್ಯ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದ ಅವರು, ರಸ್ತೆ ನಿರ್ಮಾಣದ ಮಾರ್ಗವನ್ನು ವಿನ್ಯಾಸಗೊಳಿಸುವಾಗ ಎಲ್ಲಾ ರಸ್ತೆಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಅಪಘಾತ ರಹಿತ ರಸ್ತೆಗಳನ್ನಾಗಿ ತಯಾರಿಸಲು ಹಾಗೂ ಹಾಲಿ ಅಂಕುಡೊಂಕಾಗಿರುವ (Curve Road) ರಸ್ತೆಗಳನ್ನು ಸಾಧ್ಯವಾದಷ್ಟು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೇರವಾಗಿ ಕೊಂಡೊಯ್ಯವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಇನ್ನೂ ಹತ್ತು ದಿನಗೊಳಗಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ರಸ್ತೆಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅನೂಪ್ ಶರ್ಮ, ಪ್ರಾಧಿಕಾರದ. ಬೆಂಗಳೂರು ವೃತ್ತದ ರಾಜೇಶ್, ಸಿ.ಸಿ.ಎಫ್ ಕೆ. ಟಿ ಹನುಮಂತಪ್ಪ, ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ದಿವಾಕರ್, ಮಮತಾ ಮೂಡ್, ಸುರೇಶ್, ಪೀರ್ ಪಾಷಾ ಇದ್ದರು.