ಶಿವಮೊಗ್ಗ,ಫೆ.೨೬: ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿಗೆ ನರೇಗಾ ಯೋಜನೆಯಲ್ಲಿ ಕೆಲ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ನಡೆದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಪದಗ್ರಹಣ, ಅಭಿನಂದನಾ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಇಲಾಖೆಯಲ್ಲಿ ಕಡಿಮೆ ಅನುದಾನ ಇರುವ ಕಾರಣ ಶಾಲೆಗಳ ಅಭಿವೃದ್ಧಿ ಮಂದಗತಿಯಲ್ಲಿ ಆಗುತ್ತದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿ ಬರುವ ನರೇಗಾ ಯೋಜನೆಯಲ್ಲಿ ಕೆಲ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುವುದು. ಇದಕ್ಕೆ ಶಾಲಾ ಶಿಕ್ಷಕರು ಶಾಲಾಭಿವೃದ್ಧಿ ಸಮಿತಿ ಮೂಲಕ ಕ್ರಿಯಾಯೋಜನೆ ಸಿದ್ದಮಾಡಿಕೊಡಬೇಕು ಎಂದು ಸಚಿವರು ಹೇಳಿದರು.
ಶಿವಮೊಗ್ಗ ನಗರದ ಸರಕಾರಿ ಶಾಲೆಗಳಿಗೆ ಎನ್.ಇ.ಎಸ್. ಸಂಸ್ಥೆ ಸಹಯೋದಲ್ಲಿ ಪೀಠೋಪಕರಣ ವ್ಯವಸ್ಥೆ ಮಾಡಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿಯೂ ಸ್ಮಾರ್ಟ್ ಕೊಠಡಿ ನಿರ್ಮಾಣ ಮಾಡಲಾಗಿದೆ. ಶಿವಮೊಗ್ಗ ನಗರದ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗಿಂತ ಉತ್ತಮವಾಗಿ ಮಾಡಲಾಗಿದೆ ಎಂದು ಹೇಳಿದರು.
ಪದವೀಧರ ಶಿಕ್ಷಕರಿಗೆ ಪದೋನ್ನತಿ ವಿಚಾರವಾಗಿ ಶಿಕ್ಷಣ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ ಈಶ್ವರಪ್ಪ, ಕೊರೋನದಂತಹ ಸಂಕಷ್ಟದಲ್ಲಿ ಸರಕಾರದ ಬೆನ್ನಿಗೆ ನಿಂತ ಸರಕಾರಿ ನೌಕರರ ಬೇಡಿಕೆಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
previous post