ಶಿವಮೊಗ್ಗ,ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸುವ ಕೈಗಾರಿಕೆಗಳ ಸ್ಥಾಪನೆ ಮತ್ತು ಬಂಡವಾಳ ಹೂಡಿಕೆ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಸೋಮವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಶಿವಮೊಗ್ಗ ಜಿಲ್ಲೆ ಈಗಾಗಲೇ ವೆಲ್‌ನೆಸ್ ಕ್ಲಸ್ಟರ್ ಯೋಜನೆಯಡಿ ಆಯ್ಕೆಯಾಗಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಕೈಗಾರಿಕೆಗಳ ಸ್ಥಾಪನೆ ಬಗ್ಗೆ ಹಾಗೂ ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆಯನ್ನು ಆಹ್ವಾನಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಭದ್ರಾವತಿಯಲ್ಲಿ ಎಂಪಿಎಂಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಖಾಸಗಿ ವ್ಯವಸ್ಥೆಯಲ್ಲಿ ಕಾರ್ಖಾನೆಯನ್ನು ನಡೆಸುವ ಬಗ್ಗೆ ಟೆಂಡರ್ ಕರೆಯಲಾಗಿದೆ. ಈ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮಗಳು, ಸ್ಥಳೀಯವಾಗಿ ಹೆಚ್ಚಿನ ಉದ್ಯೋಗ ಕಲ್ಪಿಸುವ ಸಾಧ್ಯತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅದೇ ರೀತಿ ವಿಐಎಸ್‌ಎಲ್‌ನಿಂದ ಬಂಡವಾಳ ಹೂಡಿಕೆಯಿಂದ ಹಿಂದಕ್ಕೆ ಪಡೆದಿರುವುದನ್ನು ಕೈಬಿಡುವ ಕುರಿತು ಈಗಾಗಲೇ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದ್ದು, ಅದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಘವೇಂದ್ರ ಅವರು ತಿಳಿಸಿದರು. ಈ ಹಿನ್ನೆಲೆಯಲ್ಲಿಯೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತಾ, ಇಲಾಖೆ ಆಯುಕ್ತ ಗುಂಜನ್ ಕೃಷ್ಣ, ಕರ್ನಾಟಕ ರಾಜ್ಯ ಪರಿಸರ ಸಂರಕ್ಷಣೆ ಮಂಡಳಿ ಸದಸ್ಯ ಶ್ರೀನಿವಾಸುಲು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹೆಚ್.ಆರ್.ರಾಜಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.