ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ದಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ, ಶಿಕಾರಿಪುರ ತಾಲೂಕಿನ ಉಡುಗಣಿಯಲ್ಲಿ ಅಕ್ಕಮಹಾದೇವಿ ಜನ್ಮಸ್ಥಳದ ಸಮಗ್ರ ಅಭಿವೃದ್ದಿ, ಶಿವಮೊಗ್ಗ-ತುಮಕೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಸಿಗಂದೂರು ಬಳಿ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಸೇತುವೆ ಕಾಮಗಾರಿ, ರೈತರ ಜಮೀನುಗಳಿಗೆ ನೀರುಣಿಸುವ ಹಲವು ಬೃಹತ್ ನೀರಾವರಿ ಯೋಜನೆಗಳು, ಶಿವಮೊಗ್ಗ ನಗರದ ವರ್ತುಲ ರಸ್ತೆ, ರೈಲ್ವೇ ಮೇಲ್ಸೇತುವೆ ಕಾಮಗಾರಿಗಳು ಹಾಗೂ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಸೇರಿದಂತೆ ಕಾಮಗಾರಿ ಅನುಷ್ಟಾನ ತ್ವರಿತಗೊಳಿಸಬೇಕು. ಎಲ್ಲಾ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. ಶಿವಮೊಗ್ಗ ನಗರದ ಹೊರವಲಯದ ಬಡಾವಣೆಗಳಿಗೆ ಕುಡಿಯುವ ನೀರು ಒದಗಿಸುವ 96 ಕೋಟಿ ರೂ. ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. ಮುಂದಿನ ಒಂದೂವರೆ ವರ್ಷದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿ ಅಭಿವೃದ್ಧಿ ಹೊಂದಬೇಕು ಎಂದು ಅವರು ಹೇಳಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ ಸಮಸ್ಯೆ ಉಂಟಾಗದಂತೆ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕು. ಯಾವುದಾದರೂ ಕ್ವಾರಿ, ಕ್ರಷರ್‍ಗಳನ್ನು ಸ್ಥಗಿತಗೊಳಿಸಲಾಗಿದ್ದರೆ ಅವುಗಳನ್ನು ತಕ್ಷಣ ಪುನಾರಂಭಿಸಿ ಅಭಿವೃದ್ಧಿ ಚಟುವಟಿಕೆಗಳಿಗೆ ವೇಗ ನೀಡಬೇಕು. ಈ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆಗಳನ್ನು ನೀಡಲಾಗಿದೆ. ಈ ಕುರಿತು ಮುಂದೆ ಯಾವುದೇ ದೂರಿಗೆ ಆಸ್ಪದ ಮಾಡಬಾರದು ಎಂದು ಅವರು ಸ್ಪಷ್ಟಪಡಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಉಂಟಾಗಿರುವ ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.