ದೈಹಿಕ ಹಲ್ಲೆ, ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಮೇಲಾಗುವ ಯಾವುದೇ ದೌರ್ಜನ್ಯ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನದಲ್ಲಿರುವ ವಿವಿಧ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಳೆದ ಆರು ತಿಂಗಳ ಅವಧಿಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ನಡೆದ ೨೪ಪ್ರಕರಣಗಳನ್ನು ಗುರುತಿಸಲಾಗಿದ್ದು, ಆ ಪೈಕಿ 11ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಇಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಅವರಿಗೆ ಸೂಚಿಸಿದರು.
ಮಕ್ಕಳ ಮೇಲೆ ನಡೆಯುವ ಕ್ರೌರ್ಯ ಹಲ್ಲೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಅವರಿಂದ ದೂರುಗಳನ್ನು ಸ್ವೀಕರಿಸಿ, ನೊಂದವರ ನೆರವಿಗೆ ಧಾವಿಸಲು ಮಕ್ಕಳ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಈ ಸಹಾಯವಾಣಿ ಸಾರ್ವಜನಿಕರು ೧೦೯೮ಕ್ಕೆ ಉಚಿತವಾಗಿ ಕರೆಮಾಡಿ ದೂರು ದಾಖಲಿಸಬಹುದಾಗಿದೆ. ಈ ವಿಷಯವನ್ನು ಜಿಲ್ಲೆಯಾದ್ಯಂತ ಬಿತ್ತಿ ಬರಹಗಳ ಮೂಲಕ ಪ್ರಚುರಪಡಿಸಲಾಗಿದೆ. ಅಗತ್ಯವಿರುವಲ್ಲಿ ಇನ್ನಷ್ಟು ಬಿತ್ತಿ ಬರಹಗಳನ್ನು ಬರೆಸಿ, ಪ್ರಚುರ ಪಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಿಲ್ದಾಣ ಮತ್ತು ಮಹಾನಗರಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೊಲೀಸ್, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ತರಬೇತಿಗಳನ್ನು ಆಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಸಂಬಂಧಿತ ಇನ್ನಷ್ಟು ವಿವಿಧ ಇಲಾಖೆಯ ಅಧಿಕಾರಿಗಳಿಗೂ ತರಬೇತಿ ನೀಡಿ, ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದರು.
ಗರ್ಭಿಣಿ, ಬಾಣಂತಿ ಮತ್ತು ಅಭಿಜಾತ ಶಿಶುಗಳ ಕುರಿತು ಇಲಾಖೆಯ ಎಲ್ಲಾ ಹಂತದ ಅಧಿಕಾರಿ-ಸಿಬ್ಬಂಧಿಗಳು ಸದಾ ಮಾಹಿತಿ ಹೊಂದಿರಬೇಕು. ಅಗತ್ಯವಿದ್ದಲ್ಲಿ ಹಾಜರು ಪಡಿಸಲು ಸಿದ್ಧರಿರಬೇಕೆಂದವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಆಲ್ಕೊಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಕೀರ್ಣ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಕಲ್ಯಾಣ ಸಮಿತಿ ಕಟ್ಟಡವು ಅತ್ಯಂತ ಚಿಕ್ಕದಾಗಿದ್ದು, ಕಾರ್ಯನಿರ್ವಹಣೆಗೆ ಅಡಚಣೆ ಉಂಟಾಗುತ್ತಿದ್ದು, ಪರ್ಯಾಯ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಮಹಿಳಾ ಅಭಿವೃದ್ಧಿ ಯೋಜನೆಯ ಕಾರ್ಯಕ್ರಮ ನಿರ್ವಾಹಕ ಸಿ.ಸುರೇಶ್, ಗಂಗೀಬಾಯಿ, ಮಕ್ಕಳ ಕಲ್ಯಾಣ ಸಮಿತಿಯ ರೇಖಾ, ಜಿಲ್ಲಾ ಆರ್.ಸಿ.ಹೆಚ್. ಡಾ.ನಾಗರಾಜ ನಾಯ್ಕ್, ಡಾ|| ರಜನಿ ಪೈ, ಸೇರಿದಂತೆ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು ಅವರ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಸಾಮಾನ್ಯ ಹಾಗೂ ಗಂಭೀರ ಸ್ವರೂಪದ ವಿಷಯಗಳನ್ನು ಸ್ಥಳೀಯವಾಗಿ ಇರುವ ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ಖುದ್ದು, ಅಥವಾ ಲಿಖಿತವಾಗಿ ತ್ವರಿತವಾಗಿ ಮಾಹಿತಿ ನೀಡುವಂತೆ ಸೂಚಿಸಿದ ಅವರು, ಬಾಲ್ಯವಿವಾಹ, ಮಕ್ಕಳ ಮೇಲಿನ ಹಲ್ಲೆ ಮುಂತಾದ ಪ್ರಕರಣಗಳು ನಡೆದು, ಗಂಭೀರ ಸ್ವರೂಪ ಪಡೆದಲ್ಲಿ ಅಂತಹ ಕಾರ್ಯಕರ್ತರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.-ಕೆ.ಬಿ ಶಿವಕುಮಾರ್, ಜಿಲ್ಲಾಧಿಕಾರಿ