ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ(೨೬) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಭಾರತೀ ಕಾಲೋನಿಯಲ್ಲಿ ಕೊಲೆ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಬಳಿಕ ಪೊಲೀಸರು ಲಾಠಿಚಾಜ್ ಮಾಡಿ ಪರಿಸ್ಥಿತಿ ತಹಬಂದಿಗೆ ತಂದಿದ್ದಾರೆ. ಸ್ಥಳದಲ್ಲಿ ಡಿಸಿ ಮತ್ತು ಎಸ್ಪಿ ಮೊಕ್ಕಾಂ ಹೂಡಿದ್ದಾರೆ. ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಬಹುದಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮೃತ ಹರ್ಷ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ ನಡೆದಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಿಜಾಬ್ ಗಲಾಟೆ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿದ್ದ ನಗರದಲ್ಲಿ ಈ ಘಟನೆಯ ದುರ್ಲಾಭ ಪಡೆದುಕೊಳ್ಳದಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ನಗರದ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.